ನವದೆಹಲಿ : ಕರ್ನಾಟಕದಲ್ಲಿ ಇತ್ತೀಚೆಗೆ ಬಿದ್ದ ಭಾರೀ ಮಳೆ, ಗಾಳಿಯಿಂದ ರೈತರ ಲಕ್ಷಾಂತರ ರೂ. ಬೆಳೆ ನಷ್ಟವಾಗಿದೆ. ಕಾರಣ ಪರಿಸ್ಥಿತಿ ಅಧ್ಯಯನಕ್ಕೆ ಶೀಘ್ರ ಕೇಂದ್ರ ತಂಡವೊಂದನ್ನು ಕಳುಹಿಸಿಕೊಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿರುವುದಾಗಿ ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಸ್ಥಿತಿ ಕಷ್ಟಕರವಾಗಿದೆ. ಈ ನಿಟ್ಟಿನಲ್ಲಿ ಅವರ ನೆರವಿಗೆ ಬರುವಂತೆ ಮನವಿ ಮಾಡಿರುವುದಾಗಿ ಹೇಳಿದರು.
ರಾಜ್ಯದ ಧಾರವಾಡ, ರಾಯಚೂರು ಹಾಗೂ ಮೈಸೂರು ಜಿಲ್ಲೆ ಈ ಮೂರರಲ್ಲಿ ಯಾವುದೇ ಸ್ಥಳದಲ್ಲಿ ಐಐಟಿ ಸ್ಥಾಪನೆಗೆ ಅನುಮತಿ ನೀಡಬೇಕು ಹಾಗೂ ಈ ಸಂಬಂಧ ಹಣಕಾಸಿನ ನೆರವು ನೀಡುವುದಾಗಿ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಅವರಲ್ಲಿ ಆಗ್ರಹಿಸಿದ್ದಾಗಿ ಸಚಿವರು ತಿಳಿಸಿದರು.
ರಾಜ್ಯದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚಿನ ಧನ ಸಹಾಯ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿದೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.