ಬೆಂಗಳೂರು : ಮಾತೃಭಾಷೆಯಲ್ಲಿ ಶಿಕ್ಷಣ ಮಾಧ್ಯಮ ದೊರೆಯುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸದ್ಯದಲ್ಲೇ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಮಾತೃಭಾಷೆ ಶಿಕ್ಷಣ ಮಾಧ್ಯಮಕ್ಕೆ ಆದ್ಯತೆ ನೀಡುವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರ ಹಾಗೂ ನಗರಾಭಿವೃದ್ಧಿ ಸಚಿವ ವೆಂಕಯ್ಯನಾಯ್ಡು ತಿಳಿಸಿದ್ದಾರೆ.
ಪೀಣ್ಯ ಕೈಗಾರಿಕಾ ಪ್ರದೇಶದಿಂದ ನಾಗಸಂದ್ರ ವರೆಗಿನ ನಮ್ಮ ಮೆಟ್ರೋ ಮಾರ್ಗ ರೀಚ್-3ಬಿ ಉದ್ಘಾಟಿಸಿ ಮಾತನಾಡಿದ ಅವರು, ಮಾತೃಭಾಷೆಯಲ್ಲಿ ಶಿಕ್ಷಣ ದೊರೆಯಬೇಕೆಂಬುದು ನಮ್ಮ ವೈಯಕ್ತಿಕ ಅಭಿಲಾಷೆಯಾಗಿದೆ. ಇದರಿಂದ ಪ್ರಾಂತೀಯ ಸಮನ್ವಯತೆ ಸಾಧಿಸಲು ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಸರ್ವಪಕ್ಷಗಳ ನಿಯೋಗ ಭೇಟಿ ಮಾಡಿ ಚರ್ಚೆ ನಡೆಸಿರುವ ಸಂದರ್ಭದಲ್ಲಿ ಪ್ರಧಾನಿಯವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.
ಬೆಂಗಳೂರಿನಾದ್ಯಂತ ಮೆಟ್ರೋ ರೈಲು ವಿಸ್ತರಣೆಯಾಗಬೇಕು. ಬೆಂಗಳೂರು ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯ ಶ್ರಮಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರಕ್ಕೆ ಕೇಂದ್ರ ಸರ್ಕಾರ ಸಂಪೂರ್ಣ ಬೆಂಬಲ ನೀಡುತ್ತಿದೆ. 2016 ಮಾರ್ಚ್ 16ರೊಳಗೆ ಮೆಟ್ರೋ ಮಾರ್ಗ ರೀಚ್-3ಬಿ ಸಂಪೂರ್ಣವಾಗಲಿದೆ ಎಂದು ಹೇಳಿದರು.