ಚೆನ್ನೈ : ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರನ್ನು ನಿರ್ದೋಷಿ ಎಂದು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ತೀರ್ಪು ನೀಡಿರುವುದು ನನಗೆ ಅಚ್ಚರಿ ಮತ್ತು ಆಘಾತವನ್ನುಂಟು ಮಾಡಿದೆ ಎಂದು ಬಿಜೆಪಿ ಮುಖಂಡ ಸುಬ್ರಹ್ಮಣ್ಯನ್ ಸ್ವಾಮಿ ತಿಳಿಸಿದ್ದಾರೆ.
ತಮಿಳುನಾಡು ಮಾಜಿ ಸಿಎಂ ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಹೊರಗೆಳೆದು ಕಾನೂನು ಹೋರಾಟ ನಡೆಸಿದ ಸುಬ್ರಹ್ಮಣ್ಯನ್ ಸ್ವಾಮಿ, ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಕರ್ನಾಟಕ ಹೈಕೋರ್ಟ್ ಜಯಲಲಿತಾ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಕುರಿತಂತೆ ಅವರ ವಿರುದ್ಧ ಅಧೀನ ನ್ಯಾಯಾಲಯ ನೀಡಿದ್ದ ಆದೇಶವನ್ನು ರದ್ದುಗೊಳಿಸಿ, ಜಯಾ ಸೇರಿದಂತೆ ನಾಲ್ವರು ವಿರುದ್ಧದ ಆರೋಪವನ್ನು ಖುಲಾಸೆಗೊಳಿಸಿ ಮಹತ್ವದ ಆದೇಶ ಪ್ರಕಟಿಸಿತ್ತು.