ನವದೆಹಲಿ : ಈ ವರ್ಷಾಂತ್ಯದಲ್ಲಿ ನಡೆಯಲಿರುವ ಬಿಹಾರ ವಿಧಾನಸಭೆ ಚುನಾವಣೆ ಪಕ್ಷದ ಪಾಲಿಗೆ ಅತ್ಯಂತ ಮಹತ್ವದ್ದಾಗಿದ್ದು, ಹೊಸ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ಸಿದ್ಧವಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಶಾ, ಬಿಹಾರ ಚುನಾವಣೆಗೆ ಪಕ್ಷ ಹೆಚ್ಚಿನ ಮಹತ್ವವನ್ನು ನೀಡಲಿದ್ದು, ರಾಜ್ಯದಲ್ಲಿ ಬಿಜೆಪಿ ಇದೇ ಮೊದಲ ಬಾರಿಗೆ ಬಹುಮತದೊಂದಿಗೆ ಸ್ವಂತ ಬಲದಿಂದ ಅಧಿಕಾರಕ್ಕೇರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಹಾರದಲ್ಲಿ ಕೆಲವೊಂದು ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಸಂಬಂಧ ಈಗಾಗಲೇ ಮಾತುಕತೆ ಆರಂಭಗೊಂಡಿದೆ ಎಂದ ಅವರು ಹೊಸ ಮಿತ್ರರಿಗೆ ಪಕ್ಷದ ಬಾಗಿಲು ತೆರೆದಿದೆ ಎಂದರು.
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಬಳಿಕ ಕೇಸರಿ ಪಾಳಯದ ಪಾಲಿಗೆ ಬಿಹಾರ ವಿಧಾನಸಭೆ ಚುನಾವಣೆ ಅಗ್ನಿಪರೀಕ್ಷೆ ಎಂದೇ ಪರಿಗಣಿಸಲಾಗಿದೆ. ಹೀಗಾಗಿ ಬಿಜೆಪಿ ಹೇಳಿಕೆ ಸಾಕಷ್ಟು ಮಹತ್ವ ಪಡೆದುಕೊಂಡಿದೆ.