ನವದೆಹಲಿ : ಜೂ.21ರಂದು ದೆಹಲಿಯ ರಾಜಪಥದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯಾವುದೇ ಯೋಗಾಸನ ಮಾಡುವುದಿಲ್ಲ ಎಂದು ವಿದೇಶಾಂಗ ಖಾತೆ ಸಚಿವೆ ಸುಷ್ಮಾ ಸ್ವರಾಜ್ ಸ್ಪಷ್ಟಪಡಿಸಿದ್ದಾರೆ.
35000ಕ್ಕೂ ಹೆಚ್ಚು ಜನರು ಭಾಗವಹಿಸಲಿರುವ ರಾಜಪಥದಲ್ಲಿನ ಬೃಹತ್ ಯೋಗ ಕಾರ್ಯಕ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಉಪಸ್ಥಿತರಿರಲಿದ್ದಾರೆ. ಆದರೆ ಅವರು ಅಲ್ಲಿ ಯಾವುದೇ ಯೋಗಾಸನ ಪ್ರದರ್ಶಿಸುವುದಿಲ್ಲ. ಬದಲಿಗೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿಸಿದ್ದಾರೆ.
ಕಳೆದ ವರ್ಷ ವಿಶ್ವಸಂಸ್ಥೆಯಲ್ಲಿ ಭಾಷಣ ಮಾಡುವ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ಯೋಗ ದಿನವನ್ನು ಘೋಷಿಸುವಂತೆ ವಿಶ್ವಸಂಸ್ಥೆಗೆ ಮನವಿ ಮಾಡಿದ್ದರು. ಮುಂದೆ ಕೆಲವೇ ದಿನಗಳಲ್ಲಿ ವಿಶ್ವಸಂಸ್ಥೆ ಸರ್ವಾನುಮತದಿಂದ ಜೂ.21 ಅನ್ನು ಅಂತಾರಾಷ್ಟ್ರೀಯ ಯೋಗ ದಿನ ಎಂದು ಘೋಷಿಸಿತ್ತು. ಇದಾದ ಬೆನ್ನಲ್ಲೇ, ದೆಹಲಿಯ ರಾಜಪಥದಲ್ಲಿ ಜೂ.21ರಂದು ಬೃಹತ್ ಯೋಗಾಸನ ಕಾರ್ಯಕ್ರಮ ನಡೆಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿತ್ತು.
ಹೀಗಾಗಿ ಸಹಜವಾಗಿಯೇ ಮೋದಿ ಕೂಡಾ ಈ ಕಾರ್ಯಕ್ರಮದಲ್ಲಿ ಯೋಗಾಸನ ಮಾಡುವುದಾಗಿ ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗಿದ್ದವು.