ಮುಂಬೈ : ಗುರುವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಮಹಾನಗರಿ ಮುಂಬೈ ಜನಜೀವನ ಅಸ್ತವ್ಯಸ್ತವಾಗಿದ್ದು, ರೈಲು ಸಂಚಾರ ಸ್ಥಗಿತಗೊಂಡಿದೆ. ಎಡೆಬಿಡದೆ ಸುರಿದ ಮಳೆಯಿಂದಾಗಿ ರಸ್ತೆಗೆ ಚರಂಡಿ ನೀರೆಲ್ಲಾ ಹರಿದು ಪ್ರವಾಹದ ಪರಿಸ್ಥಿತಿ ಉಂಟಾಗಿದೆ.
ನಿನ್ನೆಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರೈಲು ಸಂಚಾರ ಅಸ್ತವ್ಯಸ್ತಗೊಂಡಿದ್ದು, ಶುಕ್ರವಾರ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಅಲ್ಲದೆ ಮುಂಬೈ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ಧಾರಕಾರವಾಗಿ ಸುರಿಯುತ್ತಿರುವ ಮಳೆಯಿಂದ ವಿಮಾನ ಸಂಚಾರದಲ್ಲೂ ವ್ಯತ್ಯಯ ಉಂಟಾಗಿದೆ.
ರೈಲು ಹಳಿಗಳು ನೀರಿನಿಂದ ಮುಳುಗಿ ಹೋಗಿರುವುದರಿಂದ ಛತ್ರಪತಿ ಶಿವಾಜಿ ಟರ್ಮಿನಸ್ಮ, ಕುರ್ಲಾ, ಸೆಂಟ್ರಲ್ ಪ್ರದೇಶದ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ವರದಿ ತಿಳಿಸಿದೆ. ಜನರು ರೈಲಿನಲ್ಲಿ ಪ್ರಯಾಣಿಸಲು ಪರದಾಡುತ್ತಿದ್ದಾರೆ. ನಿಮಗೆ ತುಂಬಾ ಅಗತ್ಯವಿದ್ದರೆ ಮಾತ್ರ ಪ್ರಯಾಣ ಕೈಗೊಳ್ಳಿ ಎಂದು ರೈಲ್ವೆ ಇಲಾಖೆ ಪ್ರಯಾಣಿಕರಲ್ಲಿ ಮನವಿ ಮಾಡಿಕೊಂಡಿದೆ.