BW News Bureau : ಕರ್ನಾಟಕ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಬೆಂಗಳೂರು ನಗರ ಹೊರವಲಯದ ಖಾಸಗಿ ರೆಸಾರ್ಟ್ವೊಂದರಲ್ಲಿ ಶುಕ್ರವಾರ ನಡೆದಿದ್ದು, ಸಭೆಯಲ್ಲಿ ಹಲವು ಮುಖಂಡರು ಭಾಗವಹಿಸಿ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ, ಮುಂಬರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆ, ಬೆಳಗಾವಿ ಅಧಿವೇಶನ, ಕೇಂದ್ರ ಸರಕಾರದ ಯೋಜನೆಗಳ ಸಮರ್ಪಕ ಅನುಷ್ಠಾನ ಹಾಗೂ ರಾಜ್ಯದಲ್ಲಿ ಪಕ್ಷ ಸಂಘಟನೆ ಕುರಿತು ಇಡೀ ದಿನ ವಿವಿದ ಹಂತಗಳಲ್ಲಿ ಸಮಾಲೋಚನೆ ನಡೆಸಿದ್ದು, ಮಧ್ಯಾಹ್ನ ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಸಲಾಗುವುದು ಎಂದರು.
ಸಭೆಯಲ್ಲಿ ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ಅನಂತ್ ಕುಮಾರ್, ವಿಧಾನ ಸಭೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಿ.ಎಸ್.ಯಡಿಯೂರಪ್ಪ, ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರು ಸೇರಿದಂತೆ ಹಲವು ಪ್ರಮುಖರು ಸಭೆಯಲ್ಲಿದ್ದರು. ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಪಕ್ಷದ ಶಾಸಕರು ಮತ್ತು ಸಂಸದರು ಉಪಸ್ಥಿತರಿದ್ದರು.