BW News Bureau : ಬಿಬಿಎಂಪಿ ಚುನಾವಣೆಗೆ ಕಾಲಾವಕಾಶ ನೀಡಬೇಕೆಂದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದೆ.
ಸುಪ್ರೀಂಕೋರ್ಟ್ ನಿರ್ದೇಶನದಂತೆ ನಿಗದಿತ ಕಾಲಾವಕಾಶದಲ್ಲೇ ಚುನಾವಣೆ ನಡೆಸಬೇಕೆಂದು ಸೂಚಿಸಿದೆ. ಇದರೊಂದಿಗೆ ರಾಜ್ಯ ಸರ್ಕಾರ ತೀವ್ರ ಮುಖಭಂಗಕ್ಕೊಳಗಾಗಿದೆ.
ಬಿಬಿಎಂಪಿ ಚುನಾವಣೆ ವಿಚಾರದಲ್ಲಿ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪನ್ನು ಹೈಕೋರ್ಟ್ ಮಾರ್ಪಡಿಸುವಂತಿಲ್ಲ ಎಂದು ಹೈಕೋರ್ಟ್ ಪೀಠದ ನ್ಯಾ.ಬಿ.ವಿ.ನಾಗರತ್ನ ಅಭಿಪ್ರಾಯವ್ಯಕ್ತಪಡಿಸಿದ್ದು, ನಿಗದಿತ ಸಮಯದಲ್ಲೇ, 2001ರ ಮೀಸಲಾತಿಯಂತೆ ಚುನಾವಣೆ ನಡೆಸುವಂತೆ ನಿರ್ದೇಶನ ನೀಡಿದ್ದಾರೆ.
ಪ್ರಕರಣದ ಸಂಬಂಧ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಪೀಠ ಹತ್ತು ಸಾವಿರ ರೂಪಾಯಿ ದಂಡ ವಿಧಿಸಿದೆ.ಚುನಾವಣಾ ವೇಳಾಪಟ್ಟಿ ನಿಗದಿಗೊಳಿಸುವಂತೆ ಚುನಾವಣಾ ಆಯೋಗಕ್ಕೆ ಸೂಚನೆ. ಆ.5ರೊಳಗೆ ಬಿಬಿಎಂಪಿಗೆ ಚುನಾವಣೆ ನಡೆಸುವಂತೆ ಆದೇಶ ನೀಡಿತ್ತು. ಹೀಗಾಗಿ ಶೀಘ್ರವೇ ಬಿಬಿಎಂಪಿಗೆ ಚುನಾವಣೆ ನಡೆಸುವುದು ಅನಿವಾರ್ಯವಾಗಿದ್ದು, ಎರಡು-ಮೂರು ದಿನಗಳಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟವಾಗಲಿದೆ.