ಬೆಂಗಳೂರು : ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಒಂದು ಕೋಟಿ ರೂ. ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ನಡೆಸುತ್ತಿರುವ ತನಿಖೆಗೆ ಕರ್ನಾಟಕ ಹೈಕೋರ್ಟ್ ಬುಧವಾರ ತಡೆ ನೀಡಿದೆ.
ಪ್ರಕಣದ ಆರೋಪಿಯಾಗಿರುವ ಲೋಕಾಯುಕ್ತ ನ್ಯಾಯಮೂರ್ತಿ ನ್ಯಾ. ವೈ.ಭಾಸ್ಕರ್ ರಾವ್ ಅವರ ಪುತ್ರ ಅಶ್ವಿನ್ ರಾವ್ ಅವರು ಲೋಕಾಯುಕ್ತ ಪೊಲೀಸರ ತನಿಖೆಗೆ ತಡೆ ನೀಡಬೇಕೆಂದು ಹೈಕೋರ್ಟ್ನ ವಿಭಾಗೀಯ ಪೀಠದಲ್ಲಿ ಬುಧವಾರ ರಿಟ್ ಅರ್ಜಿ ಸಲ್ಲಿಸಿದ್ದರು.
ಅರ್ಜಿಯನ್ನು ಕೂಡಲೇ ಕೈಗೆತ್ತಿಕೊಂಡ ಕೋರ್ಟ್, ಎಸ್ಐಟಿ ತನಿಖೆ ನಡೆಸುತ್ತಿದೆ, ಹೀಗಾಗಿ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುವ ಅಗತ್ಯವಿಲ್ಲ ಎಂದಿದೆ.
ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ ಅಶ್ವಿನ್ ರಾವ್, ಅರ್ಜಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಸಲಾಗುತ್ತಿದೆ, ಹಾಗಾಗಿ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುವ ಅಗತ್ಯವಿಲ್ಲ, ತನಿಖೆಗೆ ತಡೆ ನೀಡಬೇಕು ಎಂದು ಮನವಿ ಮಾಡಿದ್ದರು.
ಈ ಮಧ್ಯೆ ತನಿಖೆಗೆ ಹೈಕೋರ್ಟ್ ತಡೆ ನೀಡುವ ಮುನ್ನವೇ ಅಶ್ವಿನ್ ರಾವ್ ಅವರನ್ನು ಪ್ರಧಾನ ಆರೋಪಿ ಎಂದು ಪರಿಗಣಿಸಿ, ಲೋಕಾಯುಕ್ತ ಎಸ್ಪಿ ಸೋನಿಯಾ ನಾರಂಗ್ ಅವರು ಸೆಕ್ಷನ್ 13 ಭೃಷ್ಟಾಚಾರ ತಡೆ ಕಾಯ್ದೆ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.
ಇದೀಗ ಪ್ರಕರಣ ಇನ್ನಷ್ಟು ಕುತೂಹಲ ಪಡೆದುಕೊಂಡಿದೆ. ಆದರೆ ಹೈಕೋರ್ಟ್ ಸೋನಿಯಾ ನಾರಂಗ್ ನೇತೃತ್ವದ ತನಿಖೆಗೆ ತಾತ್ಕಾಲಿಕ ತಡೆ ನೀಡಿದ್ದರ ಹಿನ್ನೆಲೆಯಲ್ಲಿ ಮುಂದಿನ ಕ್ರಮಕ್ಕೆ ಅವಕಾಶವಿಲ್ಲ ಎಂದೇ ಹೇಳಲಾಗುತ್ತಿದೆ. ಈ ನಡುವೆ ರಾಜ್ಯ ಸರ್ಕಾರ ರಚಿಸಿದ ವಿಶೇಷ ತನಿಖಾ ದಳದತ್ತ ಎಲ್ಲರ ಚಿತ್ತ ಹೊರಳಿದೆ.
ಈ ಮಧ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಮತ್ತು ಲೋಕಾಯುಕ್ತ ನ್ಯಾಯಮೂರ್ತಿ ನ್ಯಾ ವೈ. ಭಾಸ್ಕರ್ ರಾವ್ ರಾಜೀನಾಮೆ ನೀಡಲಿ ಎಂದು ವಕೀಲರು ಲೋಕಾಯುಕ್ತ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು.