ನವದೆಹಲಿ : ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರ ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಬುಧವಾರ ಸುಪ್ರೀಂ ಕೋರ್ಟ್ ವಜಾಗೊಳಿಸಿ, ಮೂವರಿಗೂ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದೆ.
ಜು. ೨೧ ರಂದು ಕೇಂದ್ರ ಸರ್ಕಾರ ರಾಜೀವ್ ಗಾಂಧಿ ಹಂತಕರಿಗೆ ಯಾವುದೇ ಕರುಣೆಯ ಅವಶ್ಯಕತೆ ಇಲ್ಲ. ಏಕೆಂದರೆ ಅವರು ವಿದೇಶಿಯರ ಜೊತೆ ಪಿತೂರಿ ಮಾಡಿ ಹತ್ಯೆಯಲ್ಲಿ ಭಾಗಿಯಾಗಿದ್ದಾರೆ ಎಂದು ಸುಪ್ರೀಂ ಕೋರ್ಟ್ ನಲ್ಲಿ ಪ್ರತಿವಾದ ಮಾಡಿತ್ತು.
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರಾದ ಪೆರಾರಿವಲನ್, ಸಂತನ್, ಮುರುಗನ್ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದರು. ಆದರೆ ಇತ್ತೀಚೆಗೆ ಮೂವರು ಅಪರಾಧಿಗಳ ಗಲ್ಲುಶಿಕ್ಷೆಯನ್ನು ಸುಪ್ರೀಂಕೋರ್ಟ್ ಜೀವಾವಧಿ ಶಿಕ್ಷೆಗೆ ಪರಿವರ್ತಿಸಿ ತೀರ್ಪು ನೀಡಿತ್ತು. ಈ ತೀರ್ಪಿನ ನಂತರ ತಮಿಳುನಾಡು ಸರ್ಕಾರ ಹಂತಕರ ಬಿಡುಗಡೆಗೊಳಿಸಲು ತೀರ್ಮಾನಿಸಿತ್ತು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಕೇಂದ್ರ ಸರ್ಕಾರ, ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಇಳಿಸಿದ್ದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಕ್ಯೂರೇಟಿವ್ ಅರ್ಜಿ ಸಲ್ಲಿಸಿತ್ತು.