ಬೆಂಗಳೂರು : ಲೋಕಾಯುಕ್ತ ಕಚೇರಿಯಲ್ಲಿ ನಡೆದಿದ್ದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಒತ್ತಡಕ್ಕೆ ಮಣಿದಿರುವ ಲೋಕಾಯುಕ್ತ ನ್ಯಾ.ಭಾಸ್ಕರ ರಾವ್ ತಮ್ಮ ಹುದ್ದೆಗೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ. ನ್ಯಾ.ಭಾಸ್ಕರ ರಾವ್ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ ಎಂದು ಸಚಿವ ಜಯಚಂದ್ರ ಸ್ಪಷ್ಟಪಡಿಸಿದ್ದಾರೆ.
ಲೋಕಾಯುಕ್ತದಲ್ಲಿ ಭಾಸ್ಕರ ರಾವ್ ಪುತ್ರ ಅಶ್ವಿನ್ ರಾವ್ ಅವರಿಂದ ನಡೆದಿದೆ ಎನ್ನಲಾದ ಡೀಲ್ ಪ್ರಕರಣ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಲೋಕಾಯುಕ್ತ ನ್ಯಾ.ಭಾಸ್ಕರರಾವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕೆಂದು ಪ್ರತಿಪಕ್ಷಗಳು ಒತ್ತಾಯಿಸಿದ್ದವು.
135 ದಿನಗಳ ಸುದೀರ್ಘ ರಜೆಯಲ್ಲಿದ್ದ ಲೋಕಾಯುಕ್ತ ನ್ಯಾಯಮೂರ್ತಿ ಭಾಸ್ಕರ ರಾವ್ ಅವರು ತಮ್ಮ ರಾಜೀನಾಮೆ ಪತ್ರವನ್ನು ರಿಜಿಸ್ಟ್ರಾರ್ ಬಾಲಕೃಷ್ಣ ಅವರ ಮೂಲಕ ರಾಜ್ಯಪಾಲ ವಜೂಭಾಯಿವಾಲಾ ಅವರಿಗೆ ರವಾನಿಸಿದ್ದಾರೆ. ನ್ಯಾ.ಭಾಸ್ಕರ ರಾವ್ ಅವರ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ.