ನವದೆಹಲಿ : 67ನೇ ಗಣರಾಜ್ಯೋತ್ಸವ ಆಚರಣೆಗೆ ರಾಷ್ಟ್ರ ರಾಜಧಾನಿ ದಿಲ್ಲಿ ಸರ್ವರೀತಿಯಿಂದ ಸಜ್ಜಾಗಿದೆ. ಉಗ್ರರ ಬೆದರಿಕೆಯ ಹಿನ್ನೆಲೆಯಲ್ಲಿ ದೇಶ್ಯಾದ್ಯಾಂತ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ.
ಭಯೋತ್ಪಾದಕ ದಾಳಿಗಳ ಕುರಿತು ಗುಪ್ತಚರ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ ದಿಲ್ಲಿಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮೆಟ್ರೋ ನಿಲ್ದಾಣ, ವಿಮಾನ ನಿಲ್ದಾಣ ಸಹಿತ ಪ್ರಮುಖ ಸ್ಥಳಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ರಾಜಪಥ್ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ 15,000ಕ್ಕೂ ಅಧಿಕ ಸಿಸಿ ಟಿವಿ ಕೆಮರಾಗಳನ್ನು ಅಳವಡಿಸಲಾಗಿದೆ.
ಈ ಬಾರಿಯ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಫ್ರಾನ್ಸ್ ಅಧ್ಯಕ್ಷ ಫ್ರಾಂಕೋಯಿಸ್ ಹೊಲಾಂಡೆ ಅವರು ಭಾಗವಹಿಸುತ್ತಿದ್ದಾರೆ. 1950ರ ಮೊದಲ ಗಣರಾಜ್ಯೋತ್ಸವದ ಬಳಿಕ ಇದೇ ಮೊದಲ ಬಾರಿಗೆ ಫ್ರಾನ್ಸ್ ಸೇನೆ ಕೂಡ ರಾಜಪಥದಲ್ಲಿ ನಡೆಯಲಿರುವ ಪಥಸಂಚಲನದಲ್ಲಿ ಭಾಗವಹಿಸುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಗಣರಾಜ್ಯೋತ್ಸವದ ಸಂಧರ್ಭದಲ್ಲಿ ದೇಶದ ಜನತೆಗೆ ಶುಭಾಷಯ ಕೋರಿದ್ದಾರೆ. ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಸೇರಿದಂತೆ ಸಂವಿಧಾನ ರಚನೆಯಲ್ಲಿ ಪ್ರಮುಖ ಪಾತ್ರವಹಿಸಿದವರಿಗೆ ಪ್ರಧಾನಿ ಗೌರವ ನಮನ ಸಲ್ಲಿಸಿ ಟ್ವೀಟ್ ಮಾಡಿದ್ದಾರೆ.