ಬೆಂಗಳೂರು : ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಹೊಸ ರಾಜಕೀಯ ಸಂಚಲನ ಮೂಡಿದ್ದು, ಇದೀಗ ಹಲವು ಕಾಂಗ್ರೆಸ್ ಮತ್ತು ಜೆಡಿಎಸ್ ನ ಅಸಮಧಾನ ಹೊಂದಿರುವ ನಾಯಕರು ಬಿಜೆಪಿ ಸೇರ್ಪಡೆಯಾಗಲು ಚಿಂತನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಬಿಜೆಪಿ ಮತ್ತೆ ಆಪರೇಷನ್ ಕಮಲ ಮಾಡಲು ಮುಂದಾಗಿದೆ ಎಂದು ವರದಿಯಾಗಿದ್ದು, ಚನ್ನಪಟ್ಟಣದ ಕಾಂಗ್ರೆಸ್ ಶಾಸಕ ಸಿ.ಪಿ ಯೋಗೇಶ್ವರ್ , ಜೆಡಿಎಸ್ ಶಾಸಕ ಚಲುವರಾಯಸ್ವಾಮಿ ,ಜೆಡಿಎಸ್ ಪರಿಷತ್ ಸದಸ್ಯ ಪುಟ್ಟಣ್ಣ ಮತ್ತು ಮಾಗಡಿ ಕ್ಷೇತ್ರದ ಜೆಡಿಎಸ್ ಶಾಸಕ ಬಾಲಕೃಷ್ಣ ಅವರನ್ನು ಬಿಜೆಪಿಗೆ ಕರೆ ತರಲು ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ ಎಂದು ಹೇಳಲಾಗುತ್ತಿದೆ.
ಚಲುವರಾಯಸ್ವಾಮಿ, ಪುಟ್ಟಣ್ಣ ಮತ್ತು ಬಾಲಕೃಷ್ಣ ಅವರು ಜೆಡಿಎಸ್ ನಾಯಕತ್ವದ ವಿರುದ್ದ ಬಹಿರಂಗವಾಗಿ ಅಸಮಧಾನ ತೋಡಿಕೊಂಡಿದ್ದು ಪಕ್ಷದಿಂದ ಒಂದು ಹೆಜ್ಜೆ ಹೊರಗಿಟ್ಟಿದ್ದಾರೆ ಎಂದು ಹೇಳಲಾಗಿದೆ.
ಈಗಾಗಲೇ ನಾಲ್ವರ ಸೇರ್ಪಡೆ ಕುರಿತಾಗಿ ಬೆಂಗಳೂರಿನ ಪ್ರಭಾವಿ ಬಿಜೆಪಿ ನಾಯಕರ ನಿವಾಸದಲ್ಲಿ ಸಭೆ ನಡೆಸಿ ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ. ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಯಡಿಯೂರಪ್ಪ ಅವರು ವರಿಷ್ಠರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.