ಬೆಂಗಳೂರು : ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಪರಿಹಾರ ಕೆಲಸಗಳಿಗಾಗಿ ಹೆಚ್ಚಿನ ನೆರವು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ಪ್ರಧಾನಿ ಬಳಿಗೆ ನಿಯೋಗ ಕೊಂಡೊಯ್ಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಕೇಂದ್ರ ಸರ್ಕಾರ ಬರ ಪರಿಹಾರ ಕಾಮಗಾರಿಗಳಿಗೆ ನೆರವು ನೀಡಿದೆ. ಆದರೆ ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಇರುವುದರಿಂದ ಹೆಚ್ಚಿನ ನೆರವು ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.
ಮುಂಗಾರು ಮಳೆ ವೈಫಲ್ಯದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 1473 ಕೋಟಿ ರೂ.ಗಳನ್ನು ಹಾಗೂ ಹಿಂಗಾರು ಮಳೆ ವೈಫಲ್ಯದ ಹಿನ್ನೆಲೆಯಲ್ಲಿ 723 ಕೋಟಿ ರೂ.ಗಳನ್ನು ನೀಡುವುದಾಗಿ ತಿಳಿಸಿದೆ ಎಂದು ಇದೇ ವೇಳೆ ಹೇಳಿದರು.
ಬರ ಅಧ್ಯಯನಕ್ಕೆ ರಚಿಸಲಾಗಿರುವ ಸಚಿವ ಸಂಪುಟದ ಉಪ ಸಮಿತಿಗಳು ಈಗಾಗಲೇ ಒಂದು ವರದಿಯನ್ನು ನೀಡಿವೆ ಅದನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿದ್ದೇವೆ. ಪೂರ್ಣ ಪ್ರಮಾಣದ ವರದಿಯನ್ನು ಈ ಸಮಿತಿಗಳು ಸದ್ಯದಲ್ಲೇ ನೀಡಲಿವೆ ಎಂದು ಸಿಎಂ ತಿಳಿಸಿದ್ದಾರೆ.