ಅಹ್ಮದಾಬಾದ್ : 2002ರಲ್ಲಿ ಗುಜರಾತ್ ನ ಗೋಧ್ರಾದಲ್ಲಿ ನಡೆದ ಹಿಂಸಾಚಾರದ ಬಳಿಕ ನಡೆದ ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹ್ಮದಾಬಾದ್ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಸತತ 14 ವರ್ಷಗಳ ಸುಧೀರ್ಘ ವಿಚಾರಣೆ ಬಳಿಕ ವಿಶೇಷ ನ್ಯಾಯಾಲಯದಿಂದ ಮಹತ್ವದ ತೀರ್ಪು ಹೊರಬಿದ್ದಿದ್ದು, ಪ್ರಕರಣದಲ್ಲಿ ಬಂಧಿತರಾಗಿದ್ದ 66 ಮಂದಿಯ ಪೈಕಿ 24 ಮಂದಿಯ ಆರೋಪ ಸಾಬೀತಾಗಿದೆ ಎಂದು ನ್ಯಾಯಾಲಯ ಹೇಳಿದೆ.
ವಿಚಾರಣೆ ನಡೆಸಿದ ನ್ಯಾ.ಪಿ.ಬಿ.ದೇಸಾಯಿ ಅವರು, 66 ಮಂದಿ ಆರೋಪಿಗಳ ಪೈಕಿ 24 ಮಂದಿಯ ಆರೋಪ ಸಾಬೀತಾಗಿದೆ ಎಂದು ಹೇಳಿದ್ದಾರೆ. ಈ ಪೈಕಿ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ 36 ಜನರನ್ನು ಖುಲಾಸೆ ಗೊಳಿಸಲಾಗಿದ್ದು, 11 ಆರೋಪಿಗಳ ವಿರುದ್ಧದ ಕೊಲೆ ಆರೋಪ ಸಾಬೀತಾಗಿದೆ ಎಂದು ಹೇಳಿದ್ದಾರೆ.
ಉಳಿದ 13 ಆರೋಪಿಗಳ ವಿರುದ್ಧ ಇತರೆ ಆರೋಪಗಳು ಸಾಬೀತಾಗಿದ್ದು, ಎಲ್ಲ ಆರೋಪಿಗಳಿಗೂ ಜೂನ್ 6ರಂದು ಶಿಕ್ಷೆ ಪ್ರಮಾಣ ಪ್ರಕಟಿಸುವುದಾಗಿ ನ್ಯಾಯಾಧೀಶರು ಹೇಳಿದ್ದಾರೆ.