ನವದೆಹಲಿ : ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಹೈಕಮಾಂಡ್ ಸಮ್ಮತಿ ಸೂಚಿಸಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ನಡೆದ ಎರಡು ಗಂಟೆಗಳ ಕಾಲದ ಚರ್ಚೆ ಯಶಸ್ವಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ವಿಷಯ ಸ್ಪಷ್ಟಪಡಿಸಿದ್ದು, ಭಾನುವಾರ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಈ ಮೂಲಕ ಸಚಿವ ಸಂಪುಟ ಪುನಾರಚನೆಗೆ ಇದ್ದ ಬಿಕ್ಕಟ್ಟು ಪರಿಹಾರವಾದಂತಾಗಿದೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪಕ್ಷದ ಇತರ ಪ್ರಮುಖರು ಪಾಲ್ಗೊಂಡಿದ್ದ ಸಭೆಯಲ್ಲಿ ಪಕ್ಷವನ್ನು ಬಲಪಡಿಸುವ ಸಲುವಾಗಿ ಸಂಪುಟ ಪುನಾರಚನೆ ಬಗ್ಗೆ ಚರ್ಚಿಸಲಾಯಿತು. ರಾಜ್ಯಪಾಲರಿಗೆ ನಾಳೆ ಅಥವಾ ನಾಡಿದ್ದು ನೂತನ ಸಚಿವರ ಪಟ್ಟಿಯನ್ನು ರವಾನಿಸಲಾಗುವುದು. ರಾಜ್ಯಪಾಲರ ಸಮಯಾವಕಾಶ ನೋಡಿಕೊಂಡು ಸಂಪುಟ ಪುನಾರಚನೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.