ನವದೆಹಲಿ : 70ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ಈ ವರ್ಷ ಸ್ವಾತಂತ್ರ್ಯೊತ್ಸವವನ್ನು ವಿಭಿನ್ನವಾಗಿ ಆಚರಿಸಲು ಬಿಜೆಪಿ ನಿರ್ಧರಿಸಿದ್ದು, ‘ತಿರಂಗಾ ಯಾತ್ರಾ’ ಹೆಸರಿನಲ್ಲಿ ದೇಶಾದ್ಯಂತ ಒಂದು ವಾರ ರ್ಯಾಲಿ ಹಾಗೂ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ.
ದೆಹಲಿಯಲ್ಲಿ ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ, ಈ ಬಗ್ಗೆ ಅಧಿಕೃತ ಘೊಷಣೆ ಹೊರಡಿಸಲಾಗಿಲ್ಲ.
70ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆ.15ರಿಂದ 22ರವರೆಗೆ ದೇಶಾದ್ಯಂತ ರ್ಯಾಲಿ ಮತ್ತು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಈ ವೇಳೆ, ಸಂಸದರು ತಮ್ಮ ಕ್ಷೇತ್ರಗಳಲ್ಲಿ ಬೈಕ್ ರ್ಯಾಲಿ, ಸಭೆ ಮತ್ತಿತರ ಕಾರ್ಯಕ್ರಮ ಆಯೋಜಿಸಲಿದ್ದಾರೆ.
ಬಡವರ ಪರ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಮತ್ತು ರಾಷ್ಟ್ರೀಯ ಹಿತಾಸಕ್ತಿ ವಿಚಾರಗಳನ್ನು ಜನರಿಗೆ ತಲುಪಿಸಲು ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಪ್ರಧಾನಿ ನರೇಂದ್ರ ಮೋದಿ, ಸಚಿವ ವೆಂಕಯ್ಯ ನಾಯ್ಡು ಸೇರಿದಂತೆ 66 ಕೇಂದ್ರ ಸಚಿವರು, ಪಕ್ಷದ 33 ಪದಾಧಿಕಾರಿಗಳು ಮತ್ತು ಪಕ್ಷದ ಅನೇಕ ಹಿರಿಯ ನಾಯಕರು ಸಭೆಯಲ್ಲಿ ಭಾಗವಹಿಸಿದ್ದಾರೆ.