ನವದೆಹಲಿ : ತೀವ್ರ ವಿವಾದಕ್ಕೆ ಕಾರಣವಾಗಿದ್ದ ಡಿವೈಎಸ್ಪಿ ಎಂ.ಕೆ.ಗಣಪತಿ, ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಿವಮೊಗ್ಗ ಸಂಸದ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ.
ಲೋಕಸಭೆ ಕಲಾಪದ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಈ 2 ಪ್ರಕರಣಗಳನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿದರು.
ರಾಜ್ಯದಲ್ಲಿ ಸರ್ಕಾರಿ ಅಧಿಕಾರಿಗಳಿಗೆ ರಕ್ಷಣೆಯೇ ಇಲ್ಲದಂತಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಅಧಿಕಾರಿಗಳಿಗೆ ಕಿರುಕುಳ ನೀಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಈ ಸಂದರ್ಭದಲ್ಲಿ ರಾಜ್ಯದ ಕಾಂಗ್ರೆಸ್ ಸಂಸದರು ಬಿಎಸ್ ವೈ ಪ್ರಸ್ತಾಪಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಇದು ರಾಜ್ಯಕ್ಕೆ ಸಂಬಂಧಿಸಿದ ವಿಷಯ ಹಾಗಾಗಿ ರಾಜ್ಯದ ವಿಷಯ ಸದನದಲ್ಲಿ ಪ್ರಸ್ತಾಪಿಸಲು ಅವಕಾಶ ನೀಡಬಾರದು ಎಂದು ಕಾಂಗ್ರೆಸ್ ಸಂಸದರಾದ ಧ್ರುವ ನಾರಾಯಣ್, ಮುದ್ದೇಹನುಮಗೌಡ, ಹುಕ್ಕೇರಿ, ಚಂದ್ರಪ್ಪ ಆಕ್ಷೇಪ ವ್ಯಕ್ತಪಡಿಸಿದರು.
ಲೋಕಸಭೆಯ ಶೂನ್ಯ ವೇಳೆಯಲ್ಲಿ ರಾಜ್ಯದ ವಿವಿಧ ಪ್ರಕರಣಗಳ ಬಗ್ಗೆ ಮಾತನಾಡಿದ ಯಡಿಯೂರಪ್ಪ ಕನ್ನಡದಲ್ಲಿಯೇ ವಿಷಯ ಪ್ರಸ್ತಾಪಿಸುವ ಮೂಲಕ ಗಮನ ಸೆಳೆದರು.