ನವದೆಹಲಿ : ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್, ಭಾರತೀಯ ಸೇನಾ ಮುಖ್ಯಸ್ಥ ಜನರಲ್ ದಲ್ಬಿರ್ಸಿಂಗ್ ಹುತಾತ್ಮ ಯೋಧರ ಸಮಾಧಿಗೆ ತೆರಳಿ ಗೌರವ ನಮನ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಪರಿಕ್ಕರ್, ಗಡಿ ಪ್ರದೇಶದಲ್ಲಿ ಅತ್ಯಾಧುನಿಕ ರಕ್ಷಣಾ ವ್ಯವಸ್ಥೆ ನಿಯೋಜಿಸಲಾಗಿದ್ದು, ಉಗ್ರರು ನುಸುಳದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಿದ್ದರೂ ಕೂಡ ಇತ್ತೀಚಿನ ದಿನಗಳಲ್ಲಿ ಉಗ್ರರ ದಾಳಿಗೆ ಸೈನಿಕರು ಬಲಿಯಾಗುತ್ತಿರುವುದು ವಿಷಾದನೀಯ ಎಂದು ಕಳವಳ ವ್ಯಕ್ತಪಡಿಸಿದರು.
ಇನ್ನು ಕಣ್ಮರೆಯಾದ ಎಎನ್ -32 ವಿಮಾನದ ಶೋಧ ಕಾರ್ಯಕ್ಕೆ ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಇದೇ ವೇಳೆ ಮೃತ ಯೋಧರ ಸಮಾಧಿಗೆ ಕುಟುಂಬದ ಸದಸ್ಯರು, ಸೈನ್ಯ, ನೌಕಾಪಡೆ ಹಾಗೂ ವಾಯುಪಡೆ ಯೋಧರು ಗೌರವ ನಮನ ಸಲ್ಲಿಸಿದರು.