ನವದೆಹಲಿ : ಸಂವಿಧಾನದ ಚೌಕಟ್ಟಿನಲ್ಲಿ ಮಾತುಕತೆ ನಡೆಸುವ ಮೂಲಕ ಕಾಶ್ಮೀರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ನೇತೃತ್ವದಲ್ಲಿ ವಿರೋಧ ಪಕ್ಷಗಳ ನಿಯೋಗ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿ ಕಾಶ್ಮೀರದಲ್ಲಿನ ಪರಿಸ್ಥಿತಿ ಕುರಿತು ಚರ್ಚೆ ನಡೆಸಿದ್ದು, ಕಾಶ್ಮೀರದಲ್ಲಿ ಶಾಂತಿ ಮರುಸ್ಥಾಪನೆಗೆ ರಾಜಕೀಯವಾಗಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿತು.
ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಕಾಶ್ಮೀರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಂವಿಧಾನದ ಚೌಕಟ್ಟಿನಲ್ಲಿ ಮಾತುಕತೆ ನಡೆಸಲಾಗುವುದು ಎಂದು ತಿಳಿಸಿದರು.
ಕಾಶ್ಮೀರ ಹಿಂಸಾಚಾರದಲ್ಲಿ ಪ್ರಾಣ ಕಳೆದುಕೊಂಡ ಯುವಕರು, ಭದ್ರತಾ ಪಡೆ ಯೋಧರು, ಪೊಲೀಸರು ಯಾರೇ ಆಗಿರಲಿ, ಅರೆಲ್ಲರೂ ನಮ್ಮವರೇ ಆಗಿದ್ದಾರೆ. ಕಾಶ್ಮೀರದಲ್ಲಿ ನಡೆಯುತ್ತಿರುವ ಗಲಭೆಯಿಂದಾಗಿ ತೀವ್ರ ನೋವುಂಟಾಗಿದೆ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರ ಕಾಶ್ಮೀರ ಜನತೆಯೊಂದಿಗಿದೆ. ಎಲ್ಲಾ ರಾಜಕೀಯ ಪಕ್ಷಗಳು ಕಾಶ್ಮೀರದಲ್ಲಿ ಶಾಂತಿ ನೆಲೆಸುವ ನಿಟ್ಟಿನಲ್ಲಿ ಒಗ್ಗಟ್ಟಾಗಿ ಕ್ರಮಕೈಗೊಳ್ಲುವ ಕುರಿತು ಚರ್ಚೆ ನಡೆಸುವ ಅಗತ್ಯವಿದೆ. ಜಮ್ಮು ಮತ್ತು ಕಾಶ್ಮೀರದ ಸಮಸ್ಯೆಗೆ ಮಾತುಕತೆಗಳ ಮೂಲಕವೇ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ಮೋದಿ ತಿಳಿಸಿದ್ದಾರೆ.