ಬೆಂಗಳೂರು : ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ರಾಜ್ಯಕ್ಕೆ ಹಿನ್ನಡೆಯಾಗಿರುವ ಹಿನ್ನೆಲೆಯಲ್ಲಿ ಕನ್ನಡ ಪರ ಸಂಘಟನೆಗಳು ನೀಡಿರುವ ಕರ್ನಾಟಕ ಬಂದ್ ಕರೆಯ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವ ಸಮಾಜ ಘಾತುಕ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ಭದ್ರತೆ ಕುರಿತ ಉನ್ನತ ಮಟ್ಟದ ಸಭೆಯಲ್ಲಿ ಬಂದ್ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ವಿಸ್ತೃತ ಚರ್ಚೆ ನಡೆಸಿದ ನಂತರ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
ಬಂದ್ ಶಾಂತಿಯುತವಾಗಿ ನಡೆಯಲಿ. ಸ್ವಯಂ ಪ್ರೇರಣೆಯಿಂದ ಬಂದ್ ನಡೆದಲ್ಲಿ ತಮ್ಮ ಅಭ್ಯಂತರವಿಲ್ಲ. ಆದರೆ, ಬಂದ್ ಮಾಡುವಂತೆ ಒತ್ತಡ, ಒತ್ತಾಯ ಹಾಗೂ ಬಲಾತ್ಕಾರ ಬೇಡ. ಬಂದ್ ಹೆಸರಿನಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಉಂಟು ಮಾಡಿದರೆ ಸುಮ್ಮನೆ ಕೂರಲು ಸಾಧ್ಯವಿಲ್ಲ. ಕಠಿಣ ಕ್ರಮ ಜರುಗಿಸುತ್ತೇವೆ ಎಂದು ಎಚ್ಚರಿಸಿದ ಸಿದ್ದರಾಮಯ್ಯ ಅವರು ಮುಂಜಾಗರೂಕತಾ ಕ್ರಮವಾಗಿ ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳನ್ನು ವಶಕ್ಕೆ ಪಡೆಯುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ಬಂದ್ ವೇಳೆ ಶಾಂತಿಯುತ ಮೆರವಣಿಗೆಗೆ ತಕರಾರಿಲ್ಲ. ಆದರೆ, ಪರಿಸ್ಥಿತಿಯ ದುರ್ಲಾಭ ಪಡೆದು ಕಲ್ಲು ತೂರಾಟ ನಡೆಸುವುದು ಅಥವಾ ಕಾನೂನು ಕೈಗೆ ತೆಗೆದುಕೊಳ್ಳುವ ಯತ್ನ ನಡೆಸುವುದು ಕಂಡು ಬಂದಲ್ಲಿ ಅವುಗಳನ್ನು ಹತ್ತಿಕ್ಕಲು ಕಠಿಣ ಕ್ರಮ ಜರುಗಿಸುವಂತೆ ಪೊಲೀಸರಿಗೆ ಆದೇಶಿಸಲಾಗಿದೆ. ಜನರಲ್ಲಿ ಭಾವನಾತ್ಮಕ ಆಕ್ರೋಶ ಇದೆ. ಆದರೆ, ಸಿಟ್ಟು ಶಾಂತಿಯುತವಾಗಿರಲಿ ಎಂಬುದೇ ಸರ್ಕಾರದ ಕಳಕಳಿಯ ಮನವಿ ಎಂದರು.
ಕೆಲವರು ತಮ್ಮ ಸ್ವಾರ್ಥ ಸಾಧನೆಗಾಗಿ ವಾಟ್ಸ್ ಅಪ್‍ನಂತಹ ಆಧುನಿಕ ತಂತ್ರಜ್ಞಾನವನ್ನು ಬಳಸುವ ನಿರೀಕ್ಷೆ ಇದೆ. ಪ್ರಚೋದನಾತ್ಮಕ ಹೇಳಿಕೆಗಳಿಗೆ ಯಾರೂ ಬಲಿಯಾಗಬಾರದು. ವದಂತಿಗಳಿಗೆ ಯಾರೂ ಕಿವಿಗೊಡಬಾರದು ಎಂದು ಮುಖ್ಯಮಂತ್ರಿ ತಿಳಿಸಿದರು.
ಬೆಂಗಳೂರು, ಮಂಡ್ಯ, ಮೈಸೂರು, ಹುಬ್ಬಳ್ಳಿ-ಧಾರವಾಡ ಹಾಗೂ ತುಮಕೂರು ನಗರಗಳಿಗೆ ಹೆಚ್ಚು ಬಂದೋಬಸ್ತ್ ಮಾಡಲಾಗಿದೆ. ಬೆಂಗಳೂರು ಮಹಾನಗರವೊಂದರಲ್ಲೇ 25,000 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಕೇಂದ್ರದ 10 ಕಂಪನಿಗಳು, ಕೇರಳದಿಂದ ಎರಡು ಕಂಪನಿಗಳು, ಆಂಧ್ರ ಪ್ರದೇಶ ಮತ್ತು ಮಹಾರಾಷ್ಟ್ರದಿಂದ ತಲಾ ಒಂದು ಕಂಪನಿ ಭದ್ರತಾ ಪಡೆಗಳು ಈಗಾಗಲೇ ರಾಜ್ಯಕ್ಕೆ ಆಗಮಿಸಿ, ಕರ್ನಾಟಕ ರಾಜ್ಯ ಮೀಸಲು ಪೊಲೀಸ್, ಸಶಸ್ತ್ರ ಮೀಸಲು ಪೊಲೀಸ್ ಹಾಗೂ ರಾಜ್ಯ ಪೊಲೀಸರೊಂದಿಗೆ ಕರ್ತವ್ಯ ನಿರ್ವಹಿಸಲಿವೆ ಎಂದು ತಿಳಿಸಿದ್ದಾರೆ.