ನವದೆಹಲಿ : ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಉಂಟಾಗಿರುವ ಹಿಂಸಾಚಾರದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಈ ಬೆಳವಣಿಗೆಯಿಂದ ವೈಯಕ್ತಿಕವಾಗಿ ತುಂಬಾ ನೋವುಂಟಾಗಿದೆ ಎಂದು ತಿಳಿಸಿದ್ದಾರೆ.
ಕಾವೇರಿ ಗಲಭೆ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ವ್ಯಾಪಕ ಹಿಂಸಾಚಾರ ಭುಗಿಲೆದ್ದಿದ್ದು, ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಎರಡೂ ರಾಜ್ಯಗಳಿಗೂ ಶಾಂತಿ ಕಾಪಾಡುಮಂತೆ ಮನವಿ ಮಾಡಿದ್ದಾರೆ. ಅಲ್ಲದೇ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳು ಪರಸ್ಪರ ಮಾತುಕತೆ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವಂತೆ ಸಲಹೆ ಮಾಡಿದ್ದಾರೆ.
ಹಿಂಸಾಚಾರದಿಂದ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಸಾಧ್ಯವಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾತುಕತೆ ಮೂಲಕ ಯಾವುದೇ ಸಮಸ್ಯೆಯನ್ನು ಇತ್ಯರ್ಥಗೊಳಿಸಲು ಸಾಧ್ಯ ಎಂದು ಹೇಳಿದ್ದಾರೆ. ಉಭಯ ರಾಜ್ಯಗಳ ಜನರು ತಮ್ಮ ನಾಗರಿಕ ಜವಾಬ್ದಾರಿಗಳನ್ನು ಅರಿತು ಸೂಕ್ಷ್ಮವಾಗಿ ನಡೆದುಕೊಳ್ಳಬೇಕೆಂದು ಕೋರುತ್ತೇನೆ ಎಂದಿದ್ದಾರೆ.