ನವದೆಹಲಿ : ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿ ಕುರಿತು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ಜನತೆ ಕಾನೂನು ಕೈಗೆತ್ತಿಕೊಳ್ಳದಂತೆ ನೋಡಿಕೊಳ್ಳುವುದು ಸರ್ಕಾರಗಳ ಜವಾಬ್ದಾರಿ ಎಂದು ಹೇಳಿದೆ.
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಉಭಯರಾಜ್ಯಗಳಲ್ಲಿ ಉಂಟಾದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಹಿಂಸಾಚಾರ ತಡೆಯಲು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಉಭಯ ರಾಜ್ಯಗಳ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದಿದೆ.
ಉಭಯ ರಾಜ್ಯಗಳ ಜನತೆ ಕಾನೂನನ್ನು ಗೌರವಿಸಬೇಕು ಅಲ್ಲದೇ ಶಾಂತಿ- ಸೌಹಾರ್ದತೆಯನ್ನು ಕಾಪಾಡಬೇಕು ಎಂದು ಸೂಚಿಸಿದೆ. ಮುಂದಿನ ವಿಚಾರಣೆಯನ್ನು ಸೆ.20ಕ್ಕೆ ನ್ಯಾಯಾಲಯ ಮುಂದೂಡಿದೆ.
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶ ಹೊರ ಬೀಳುತ್ತಿದ್ದಂತೆಯೇ ಉಭಯ ರಾಜ್ಯಗಳಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಹಿಂಸಾಚಾರದಲ್ಲಿ ಭಾಗಿಯಾದ ರಾಜ್ಯಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಕನ್ಯಾಕುಮಾರಿ ಮೂಲದ ಹಿರಿಯರೊಬ್ಬರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.