ಶ್ರೀನಗರ : ಭಾರತೀಯ ಯೋಧರು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನುಗ್ಗಿ ಉಗ್ರರ ನೆಲೆಗಳ ಮೇಲೆ ಸರ್ಜಿಕಲ್ ದಾಳಿ ನಡೆಸಿದ ಹಿನ್ನಲೆಯಲ್ಲಿ ಈ ದಾಳಿಗೆ ಪ್ರತಿಕಾರ ತೀರಿಸಿಕೊಳ್ಳಲು ಉಗ್ರರ ಗುಂಪು ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಸೇನಾ ಶಿಬಿರದ ಮೇಲೆ ದಾಳಿ ನಡೆಸಿದ್ದು, ಈ ವೇಳೆ ಓರ್ವ ಯೋಧ ಹುತಾತ್ಮರಾಗಿದ್ದಾರೆ.
ರಾತ್ರಿ 10.30ರ ಸುಮಾರಿಗೆ ಬಾರಾಮುಲ್ಲಾದ 46 ರಾಷ್ಟ್ರೀಯ ರೈಫಲ್ಸ್ ಕ್ಯಾಂಪ್ ನ್ನು ಗುರಿಯಾಗಿರಿಸಿಕೊಂಡು ಉಗ್ರರ ಗುಂಪೊಂದು ದಾಳಿ ನಡೆಸಿದೆ. ಶಿಬಿರದ ಮೇಲೆ ಉಗ್ರರು ಗ್ರೆನೇಡ್ ದಾಳಿಯನ್ನು ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆ ಕೂಡ ದಾಳಿ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ ಎಂದು ತಿಳಿದುಬಂದಿದೆ.
ಆದರೆ ಉಗ್ರರು ಯೋಧರ ಮೇಲೆ ನಡೆಸಿದ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು, ಇನ್ನೋರ್ವ ಯೋಧ ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದುಬಂದಿದೆ.
ಇಂದು ಬೆಳಗ್ಗೆ ಪಂಜಾಬ್ ಗಡಿ ಗುರುದಾಸ ಪುರದ ಬಳಿ ಪಾಕ್ ಪಡೆ ಕದನ ವಿರಾಮ ಉಲ್ಲಂಘಟನೆ ಮಾಡಿದ್ದು, ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಯೋಧರ ಶಿಬಿರವನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸಿದೆ ಎಂದು ಮಾಹಿತಿ ಲಭ್ಯವಾಗಿದೆ.