ಬೆಂಗಳೂರು : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿರುವ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ)ಅಧಿಕಾರಿಗಳು ಐದು ಅಧಿಕಾರಿಗಳ ಮನೆ ಮತ್ತು ಕಚೇರಿಗಳಲ್ಲಿ ಶೋಧ ನಡೆಸಿದ್ದಾರೆ.
ಬೆಂಗಳೂರು, ಚಿತ್ರದುರ್ಗ, ತುಮಕೂರು ಸೇರಿದಂತೆ ಒಟ್ಟು ನಾಲ್ಕು ಜಿಲ್ಲೆಗಳಲ್ಲಿ ಐದು ಅಧಿಕಾರಿಗಳ ಮನೆ ಮತ್ತು ಕಛೇರಿಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆ ಪತ್ರಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಬೆಂಗಳೂರಿನಲ್ಲಿರುವ ಬಿಬಿಎಂಪಿ ಆರೋಗ್ಯ ಅಧಿಕಾರಿ ಡಾ.ಕುಮಾರ್ ವೇಲು ಹಾಗೂ ಗ್ರೂಪ್ ಡಿ ನೌಕರ ಬಾಬು ಎಂಬುವವರ ಮನೆ ಹಾಗೂ ಕಚೇರಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಶಿವಾಜಿನಗರದಲ್ಲಿರುವ ಬಾಬು ಮನೆಯಲ್ಲಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಉಳಿದಂತೆ ಚಿತ್ರದುರ್ಗದ ಜಿಲ್ಲಾ ಮ್ಯಾನೇಜರ್ ಸಿಖಂದರ್, ಪಂಚಾಯತ್ ರಾಜ್ ಇಲಾಖೆ ಇಂಜಿನಿಯರ್ ಜಗನ್ನಾಥ್ ಹಾಗೂ ತುಮಕೂರಿನ ಜಂಟಿ ನಿರ್ದೇಶಕ ಸುಬ್ರಮಣ್ಯ ಅವರ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.