ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 300 ಕೋಟಿ ಬೆಲೆಬಾಳುವ 6.26 ಎಕರೆ ಜಮೀನು ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ವಿಧಾನ ಪರಿಷತ್ ಸದಸ್ಯ ಬಿ.ಜೆ.ಪುಟ್ಟಸ್ವಾಮಿ, ಮುಖ್ಯಮಂತ್ರಿಗಳು ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲಂಘಿಸಿ ಬೆಂಗಳೂರು ಉತ್ತರ ತಾಲ್ಲೂಕು ಭೂಪಸಂದ್ರ ಗ್ರಾಮದಲ್ಲಿ ಸುಮಾರು 300 ಕೋಟಿ ಬೆಲೆಬಾಳುವ 6.26 ಎಕರೆ ಜಮೀನು ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಈ ಸಂಬಂಧ ದಾಖಲೆಗಳನ್ನು ಬಿಡುಗಡೆ ಮಾಡಿದರು.
ಸಿದ್ದರಾಮಯ್ಯನವರು ನಿಯಮ ಉಲ್ಲಂಘಿಸಿ ಭೂಮಿಯನ್ನು ಖಾಸಗಿಯವರಿಗೆ ಪರಭಾರೆ ಮಾಡಲಾಗಿದ್ದು, 42 ನಿವೇಶನದಾರರು ಬೀದಿಪಾಲಾಗಿದ್ದಾರೆ. ಈ ಸಂಬಂಧ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಬುಧವಾರ ದೂರು ನೀಡಲಾಗುವುದು. ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯನವರು ರಾಜೀನಾಮೆ ನೀಡಬೇಕು ಎಂದು ಪುಟ್ಟಸ್ವಾಮಿ ಆಗ್ರಹಿಸಿದ್ದಾರೆ.